ಉಡುಪಿ: ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಜುಲೈ 24, 2025ರಂದು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಈ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಸದ್ಯ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮುಂದಿನ 24 ಗಂಟೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಉಡುಪಿಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿದ್ದ ಭಾರೀ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಗುರುವಾರ (ಜುಲೈ 24) ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಆದರೆ ಪದವಿ ತರಗತಿಗಳು ಎಂದಿನಂತೆ ನಡೆಯಲಿದ್ದು, ಯಾವುದೇ ಬದಲಾವಣೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.